ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಜಿಲ್ಲೆಗೆ 'ಆರೆಂಜ್ ಅಲರ್ಟ್' ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆ ಹಾಗೂ ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ ನಾಳೆ ಶನಿವಾರ (ಜುಲೈ 18) ತುರ್ತು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ:
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಅನ್ವಯವಾಗಲಿದೆ.
ವಸತಿ ಶಾಲೆಗಳು ಹಾಗೂ 12ನೇ ತರಗತಿಯವರೆಗಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ನಾಳೆ ಯಾವುದೇ ತರಗತಿಗಳನ್ನು ನಡೆಸುವಂತಿಲ್ಲ.
ಜಿಲ್ಲಾಡಳಿತದ ಈ ಅಧಿಕೃತ ರಜೆ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51(ಬಿ) ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
ನದಿ, ಸಮುದ್ರ ತೀರಕ್ಕೆ ಹೋಗದಂತೆ ರೆಡ್ ಸಿಗ್ನಲ್:
ಜಿಲ್ಲೆಯ ನದಿ ತೀರ, ತಗ್ಗು ಪ್ರದೇಶಗಳು, ಕೆರೆ ಹಾಗೂ ಸಮುದ್ರ ತೀರಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಭೇಟಿ ನೀಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ನೀರಿರುವ ಅಪಾಯಕಾರಿ ಜಾಗಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು.
ಕಡಲು ತೀವ್ರ ರೌದ್ರಾವತಾರ ತಳೆದಿರುವುದರಿಂದ ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
