ಪ್ರಾದೇಶಿಕ

ದಕ್ಷಿಣ ಕನ್ನಡದಲ್ಲಿ ಹವಾಮಾನ ವೈಪರೀತ್ಯ: ಜುಲೈ 25ರ ಶನಿವಾರ ಶಾಲೆ, ಪಿಯು ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಪ್ರಕಟ

 




ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಜುಲೈ 25, 2026 ರ ಶನಿವಾರದಂದು ಎಲ್ಲಾ ಶಾಲೆಗಳು ಹಾಗೂ ಪ್ರೌಢ, ಪಿಯುಸಿ ಮತ್ತು ಡಿಪ್ಲೊಮಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ ಹೆಚ್ಛಿನ ಮಳೆಯ ಮುನ್ಸೂಚನೆಯನ್ನು ಆಧರಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ನಿರ್ಧಾರ ಕೈಗೊಂಡಿದೆ.


 ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಮತ್ತು ಎಲ್ಲಾ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಆದೇಶ ಮೀರಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.


ಹವಾಮಾನ ವೈಪರೀತ್ಯದ ಕಾರಣ ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಬೇಕಿದೆ. ಹಳ್ಳ-ಕೊಳ್ಳಗಳು, ನದಿ ತೀರ, ತಗ್ಗು ಪ್ರದೇಶಗಳು ಮತ್ತು ಸಮುದ್ರ ದಂಡೆಯತ್ತ ಮಕ್ಕಳು ತೆರಳದಂತೆ ನಿಗಾ ವಹಿಸಲು ಕೋರಲಾಗಿದೆ. ಕಡಲಿನಲ್ಲಿ ಗಾಳಿ ಹಾಗೂ ಅಲೆಗಳ ರಭಸ ಹೆಚ್ಚಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದ್ದು, ಪ್ರವಾಸಿಗರು ಕೂಡ ನದಿ ಹಾಗೂ ಕಡಲತೀರ ಪ್ರದೇಶಗಳಿಗೆ ಭೇಟಿ ನೀಡುವುದನ್ನು ತಡೆಯಲಾಗಿದೆ.


ವಿಪತ್ತು ನಿರ್ವಹಣಾ ಕಾರ್ಯಗಳನ್ನು ದಕ್ಷತೆಯಿಂದ ನಿರ್ವಹಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ಉಪಸ್ಥಿತರಿರಲು ಸೂಚಿಸಲಾಗಿದೆ. ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ತಾಲೂಕು ಕೇಂದ್ರಗಳಲ್ಲಿ ಕಾಳಜಿ ಕೇಂದ್ರಗಳನ್ನು ಸಿದ್ಧಸ್ಥಿತಿಯಲ್ಲಿಡುವಂತೆ ಇಲಾಖಾಧಿಕಾರಿಗಳಿಗೆ ಆಜ್ಞಾಪಿಸಲಾಗಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ದೂರುಗಳು ಅಥವಾ ತುರ್ತು ನೆರವಿಗಾಗಿ ಸಾರ್ವಜನಿಕರು ಉಚಿತ ಕರೆ ಸಂಖ್ಯೆ 1077 ಅಥವಾ 0824-2442590 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.