ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ DSS ಆಗ್ರಹ
ನವದೆಹಲಿ ಜಂತರ್-ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರವನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದೆ.
ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಅವರ ಮೇಲೆ ಬಲಪ್ರಯೋಗ ನಡೆಸಿರುವುದು ಕೇಂದ್ರ ಸರ್ಕಾರದ ಅಸಹಿಷ್ಣು ಮನೋಭಾವವನ್ನು ತೋರಿಸುತ್ತದೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಸರ್ಕಾರ, ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಮಾಡುವ ಯಾವುದೇ ಕ್ರಮವನ್ನು ಸಹಿಸಲಾಗದು. ಕೇಂದ್ರ ಸರ್ಕಾರ ಕೂಡಲೇ ಲಾಠಿಚಾರ್ಜ್ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿ, ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ನೀಟ್ ಪರೀಕ್ಷೆಯಲ್ಲಿನ ಎಲ್ಲ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು.ಇದರೊಂದಿಗೆ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ದ.ಸಂ.ಸ ಜಿಲ್ಲಾ ಸಮಿತಿ(ಫ್ರೊ.ಬಿ. ಕೃಷ್ಣಪ್ಪ ಬಣ)ಯ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ ಒತ್ತಾಯಿಸಿದ್ದಾರೆ.
