ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾರ್ಥ ನಗರ, ಬಜಪೆ : ಸಡಗರದ 80ನೇ ಸ್ವಾತಂತ್ರ್ಯ ದಿನಾಚರಣೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾರ್ಥ ನಗರ ಇಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಎಂ.ಕೆ.ಅಶ್ರಫ್ ಧ್ವಜಾರೋಹಣಗೈದರು. ದ.ಸಂ.ಸ ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೃಷ್ಣಾನಂದ ಡಿ ಮಾತನಾಡುತ್ತಾ ಸ್ವಾತಂತ್ರ್ಯ ಹೋರಾಟದಲ್ಲಿ ಅದೆಷ್ಟೋ ಮಂದಿ ತಮ್ಮ ಪ್ರಾಣತ್ಯಾಗ, ಬಲಿದಾನ, ಸರ್ವಸ್ವವನ್ನು ತ್ಯಾಗ ಮಾಡಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟಿರುತ್ತಾರೆ. ಈ ಸ್ವಾತಂತ್ರ್ಯ ಪಡೆದು 80 ವರ್ಷಗಳನ್ನು ಪೂರೈಸುತ್ತಿರುವ ಈ ಶುಭ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸುಶಿಕ್ಷಿತರಾಗಿ ಉನ್ನತ ವಿದ್ಯಾಭ್ಯಾಸಗಳನ್ನು ಪಡೆದು ಸಾಧಕರುಗಳಾಗಿ, ಭವ್ಯ ಭಾರತದ ಶಿಲ್ಪಿಗಳಾಗಬೇಕೆಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಭಾಷಣ, ಸ್ವಾತಂತ್ರ್ಯ ಹೋರಾಟಗಾರರ ಉಡುಗೆ ತೊಡುಗೆಯನ್ನು ತೊಟ್ಟು ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಮೇಲು ಉಸ್ತುವಾರಿ ಸಮಿತಿಯ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕಿ ಶ್ರೀಮತಿ ಅನಂತಲಕ್ಷ್ಮಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಪ್ರಜ್ಞಾ ಧನ್ಯವಾದ ಸಲ್ಲಿಸಿದರು, ಅಧ್ಯಾಪಕರಾದ ಶ್ರೀ ಗಣೇಶ್ ಅಂಬಿಗೇರ ಕಾರ್ಯಕ್ರಮವನ್ನು ನಿರೂಪಿಸಿದರು.
