ಕೂಳೂರು ಸೇತುವೆ ಕಾಮಗಾರಿ ವಿಳಂಬ: ದಿನನಿತ್ಯ ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರ ಪರದಾಟ
✍🏻ಕಮಲಾಕ್ಷ ಬಜಾಲ್
ಮಂಗಳೂರು: ಮಂಗಳೂರು ನಗರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಕೂಳೂರು ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಪ್ರತಿದಿನವೂ ಸಾವಿರಾರು ವಾಹನ ಸವಾರರು ತೀವ್ರ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗಿದೆ. ಬೆಳಗ್ಗೆ ಮತ್ತು ಸಂಜೆ ವಾಹನ ದಟ್ಟಣೆ ಹೆಚ್ಚಾಗುವ ಸಮಯದಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿ, ಉದ್ಯೋಗಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ತುರ್ತು ಸೇವೆಯ ವಾಹನಗಳಿಗೂ ಸಂಕಷ್ಟ ಎದುರಾಗುತ್ತಿದೆ.
ಕೂಳೂರು ಮಾರ್ಗವು ಮಂಗಳೂರು, ಸುರತ್ಕಲ್, ಉಡುಪಿ ಸೇರಿದಂತೆ ಹಲವು ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಮಾರ್ಗವಾಗಿದೆ. ಈ ಮಾರ್ಗದಲ್ಲಿ ಕಾಮಗಾರಿ ವಿಳಂಬವಾಗುತ್ತಿರುವುದರ ಜೊತೆಗೆ ರಸ್ತೆ ಹೊಂಡ-ಗುಂಡಿಗಳಿಂದ ಕೂಡಿರುವುದು ವಾಹನ ಸವಾರರ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸೇತುವೆ ಕಾಮಗಾರಿ ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಈ ಹಿಂದೆಯೂ ಸಾರ್ವಜನಿಕರು ಹಾಗೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. 2023ರಲ್ಲಿಯೇ ಕಾಮಗಾರಿ ವಿಳಂಬದ ವಿರುದ್ಧ ಪ್ರತಿಭಟನೆ ನಡೆದಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ.
ಸಾರ್ವಜನಿಕರ ತಾಳ್ಮೆಯನ್ನು ಪರೀಕ್ಷಿಸುವುದನ್ನು ನಿಲ್ಲಿಸಿ, ಕಾಮಗಾರಿಯನ್ನು ತ್ವರಿತಗೊಳಿಸಬೇಕು:
ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗೆ ಅಗತ್ಯವಿರುವ ಮಾನವ ಸಂಪನ್ಮೂಲ ಮತ್ತು ಯಂತ್ರೋಪಕರಣಗಳನ್ನು ಹೆಚ್ಚಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ವಾಹನ ಸಂಚಾರ ಸುಗಮಗೊಳಿಸಲು ಸೂಕ್ತ ಟ್ರಾಫಿಕ್ ನಿರ್ವಹಣೆ, ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕೂಳೂರು ಸೇತುವೆ ಜನರ ದಿನನಿತ್ಯದ ಸಂಚಾರದ ಅವಿಭಾಜ್ಯ ಭಾಗ. ಕಾಮಗಾರಿ ವಿಳಂಬವು ಕೇವಲ ಸಂಚಾರ ಸಮಸ್ಯೆಯಲ್ಲ; ಇದು ಸಾರ್ವಜನಿಕರ ಸಮಯ, ಇಂಧನ ಮತ್ತು ಹಣದ ನಷ್ಟಕ್ಕೂ ಕಾರಣವಾಗುತ್ತಿದೆ. ಆದ್ದರಿಂದ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
.jpeg)
