ಪ್ರಾದೇಶಿಕ

VITTLA: ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಬಸ್‌ನಲ್ಲಿ ಹಾಗೂ ಬಳಿಕ ಆತನ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂದು ಗುರುತಿಸಲಾಗಿದೆ.

ಆಗಸ್ಟ್ 15, 2026ರಂದು ಅಪ್ರಾಪ್ತ ವಯಸ್ಸಿನ ಬಾಲಕನು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ ಅಪರಿಚಿತ ವ್ಯಕ್ತಿಯೊಬ್ಬರು ಬಾಲಕನ ಪಕ್ಕದಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಈ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಳಿಕ ಬಾಲಕ ಮನೆಗೆ ತೆರಳಿದಾಗಲೂ ಆರೋಪಿತ ವ್ಯಕ್ತಿ ಆತನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಬಾಲಕನ ಕಡೆಯಿಂದ ನೀಡಲಾದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 179/2026ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಕುರಿತು ವಿಟ್ಲ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.