ಮಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಆರೋಪಿಯೊಬ್ಬ, ಅನಾರೋಗ್ಯದ ಕಾರಣದಿಂದ ದಾಖಲಾಗಿದ್ದ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ವಡದಿಯಾಗಿದೆ.
ಮೂಡುಬಿದಿರೆ ತಾಲೂಕಿನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಶನ್ ಫರ್ನಾಂಡಿಸ್ (36) ಎಸ್ಕೇಪ್ ಆದ ಪೋಕ್ಸೋ ಆರೋಪಿ ಎಂದು ಗುರುತಿಸಲಾಗಿದೆ.
ಘಟನೆಯ ಹಿನ್ನೆಲೆ:
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ರೋಶನ್‌ಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿ ಆತನನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಭಾನುವಾರ ಬೆಳಗಿನ ಜಾವ ಆಸ್ಪತ್ರೆಯಲ್ಲಿದ್ದ ವೇಳೆ ಆತ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ.
ಆರೋಪಿ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ಕುರಿತು ಜೈಲು ಅಧಿಕಾರಿಗಳು ತಕ್ಷಣವೇ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಮಾತನಾಡಿ, "ಜೈಲು ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತಿರುವ ಪೊಲೀಸರು ಹಾಗೂ ಜೈಲು ಸಿಬ್ಬಂದಿ, ಪರಾರಿಯಾಗಿರುವ ಆರೋಪಿ ರೋಶನ್ ಫರ್ನಾಂಡಿಸ್‌ಗಾಗಿ ಬಲೆ ಬೀಸಿದ್ದು, ಆತನ ಸುಳಿವು ಪತ್ತೆಹಚ್ಚಲು ತನಿಖೆಯನ್ನು ತೀವ್ರಗೊಳಿಸಿದ್ದಾರೆ.